
“ರ್ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ನಗರದ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು.

ಅವರು ಹೇಳಿದರು: “ಡಾ. B. R. Ambedkar ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಒಂದು ಗ್ರಂಥವಲ್ಲ, ಅದು ನಮ್ಮ ಜೀವನದ ದಾರಿದೀಪವಾಗಿದೆ. ಭಿನ್ನಾಭಿಪ್ರಾಯಗಳಿದ್ದರೂ ಸಹ ಅವರ ಮೇಧಾಶಕ್ತಿಯನ್ನು ಗುರುತಿಸಿ ಸಂವಿಧಾನ ರಚನೆಯ ಹೊಣೆಗಾರಿಕೆಯನ್ನು ನೀಡಿದ್ದು ಕಾಂಗ್ರೆಸ್ ಪಕ್ಷದ ವಿಶಾಲ ಮನೋಭಾವವನ್ನು ತೋರಿಸುತ್ತದೆ” ಎಂದರು.ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಾಣವೇ ಪ್ರಜಾಪ್ರಭುತ್ವದ ನಿಜವಾದ ಉದ್ದೇಶವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯೇ ನಮ್ಮ ಗುರಿಯಾಗಬೇಕು. ನೊಂದವರನ್ನು ಮುಖ್ಯವಾಹಿನಿಗೆ ತರುವ ಕಾರ್ಯವೇ ಪ್ರಮುಖ ಎಂದು ತಿಳಿಸಿದರು.“ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಟಿಸಲಾರ” ಎಂಬ ಅಂಬೇಡ್ಕರ್ ಅವರ ಸಂದೇಶ ಎಲ್ಲರಿಗೂ ಪ್ರೇರಣೆಯಾಗಿದ್ದು, ಇಂದು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ ಎಂದು ಹೇಳಿದರು.





