
ಶಿವಮೊಗ್ಗ : ಅನ್ಯಾಯದ ವಿರುದ್ಧ ಗಟ್ಟಿಯಾಗಿ ಧ್ವನಿಯಾಗಿದ್ದು, ಸಮಾನತೆಗಾಗಿ ನಿರಂತರ ಹೋರಾಟ ನಡೆಸಿದ ಯುಗಪುರುಷ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ ಶಾಶ್ವತ ಪ್ರೇರಣೆಯಾಗಿದ್ದಾರೆ ಎಂದು ಸಂಸದ B. Y. Raghavendra ಹೇಳಿದರು.ನಗರದ ಕುವೆಂಪು ರಂಗಮಂದಿರದಲ್ಲಿ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. B. R. Ambedkar ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಂಬೇಡ್ಕರ್ ಅವರ ತತ್ವಗಳು, ಆದರ್ಶಗಳು ಹಾಗೂ ಮೌಲ್ಯಗಳು ಅತ್ಯಂತ ಉನ್ನತವಾಗಿದ್ದು, ಅವುಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಸಾಗಿಸುವ ಹೊಣೆಗಾರಿಕೆ ನಮ್ಮದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಅಸಮಾನತೆ, ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಹೋರಾಡಿದ ಅಂಬೇಡ್ಕರ್ ಅವರ ಬದುಕು ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.ಅತ್ಯಂತ ಸುಶಿಕ್ಷಿತರಾಗಿದ್ದ ಅಂಬೇಡ್ಕರ್ ಅವರು ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನು ಪಡೆದು, ತಮ್ಮ ಅಪಾರ ಜ್ಞಾನದಿಂದ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯರಾಗಿರುವುದು ಅವರ ಮೇಧಾಶಕ್ತಿಗೆ ಸಾಕ್ಷಿಯಾಗಿದೆ ಎಂದರು.ಮಹಿಳಾ ಸಬಲೀಕರಣಕ್ಕೂ ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಹಕ್ಕುಗಳನ್ನು ಒದಗಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಸಮಾಜದ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವಲ್ಲಿ ಅವರ ಪಾತ್ರ ಅಪ್ರತಿಮವಾಗಿದೆ ಎಂದು ಹೇಳಿದರು.ಇಂದಿನ ಯುವಜನತೆ ಅಂಬೇಡ್ಕರ್ ಅವರ ಜೀವನ ಚರಿತ್ರೆ ಮತ್ತು ಸಾಹಿತ್ಯವನ್ನು ಓದಿ ತಿಳಿದುಕೊಂಡರೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ದೊರೆಯುತ್ತದೆ. ಖಿನ್ನತೆಯಿಂದ ಹೊರಬಂದು ಆತ್ಮವಿಶ್ವಾಸದಿಂದ ಬದುಕಲು ಅವರ ಚಿಂತನೆಗಳು ದಾರಿದೀಪವಾಗುತ್ತವೆ ಎಂದು ತಿಳಿಸಿದರು.ಯಾವುದೇ ಸಂದರ್ಭದಲ್ಲೂ ಅಂಬೇಡ್ಕರ್ ಅವರ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ಚಿಂತನೆಗಳು ಮತ್ತು ಆದರ್ಶಗಳು ಸದಾಕಾಲ ಜೀವಂತವಾಗಿರುತ್ತವೆ ಎಂದು ರಾಘವೇಂದ್ರ ಹೇಳಿದರು.




