
ಯಲಬುರ್ಗಾ: ಸರ್ಕಾರಕ್ಕೆ ಕಟ್ಟಬೇಕಾದ ತೆರಿಗೆ ಹಣವನ್ನು ಸಂಗ್ರಹಿಸದೆ ಭ್ರಷ್ಟ ಅಧಿಕಾರಿಗಳು ಕೊಳ್ಳೆ ಹೊಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಾಜೇಶೇಖರ್ ಶಾಗೋಟಿ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಲಬುರ್ಗಾ ತಾಲೂಕಿನ ವ್ಯಾಪ್ತಿಗೆ ಒಳಪಡುವ 22 ಗ್ರಾಮ ಪಂಚಾಯತಿಗಳಲ್ಲಿ ಸ್ಥಾಪನೆಯಾಗಿರುವ ಸೋಲಾರ್ ಪ್ಲ್ಯಾಂಟ್ ಹಾಗೂ ವಿಂಡ್ ಫ್ಯಾನ್ ಕಂಪನಿಗಳಿಂದ ಸರಕಾರಕ್ಕೆ ಬರಬೇಕಾದ ತೆರಿಗೆ ಹಣವನ್ನು ಸಂಗ್ರಹ ಮಾಡಲಾಗುತ್ತಿಲ್ಲ ಎಂದು ಅವರು ಆರೋಪಿಸಿದರು.
ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ.22 ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳ ಪೈಕಿ ಸಂಗನಾಳ ಗ್ರಾಮ ಪಂಚಾಯತಿ ಅಧಿಕಾರಿಗಳು ಮಾತ್ರ ತೆರಿಗೆ ಸಂಗ್ರಹ ಮಾಡಿದ್ದು, ಉಳಿದ 21 ಗ್ರಾಮ ಪಂಚಾಯತಿ ಅಧಿಕಾರಿಗಳು ನಮಗೂ ಕಂಪನಿಗಳಿಗೂ ಸಂಬಂಧವೇ ಇಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಗೆದಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು “ನಮ್ಮ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ನೀಡಿಲ್ಲ” ಎಂದು ಹೇಳಿರುವುದನ್ನು ಪ್ರಶ್ನಿಸಿದ ಅವರು, ಅನುಮತಿ ಇಲ್ಲದೆ ವಿಂಡ್ ಫ್ಯಾನ್‌ಗಳನ್ನು ಹೇಗೆ ಅಳವಡಿಸಲಾಗಿದೆ ಎಂಬುದು ತನಿಖೆಗೆ ಒಳಪಡಬೇಕಾಗಿದೆ ಎಂದು ಹೇಳಿದರು.
ಕಂಪನಿಗಳ ಜೊತೆ ಕೆಲವು ಅಧಿಕಾರಿಗಳ ಶಾಮೀಲು ಇದ್ದು, ಸರ್ಕಾರಕ್ಕೆ ಉದ್ದೇಶಪೂರ್ವಕವಾಗಿ ನಷ್ಟ ಮಾಡಲಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತಕ್ಷಣ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ನಿಗಾವಹಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರು ಹಾಗೂ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
https://youtu.be/HiX0MGSemLEhttps://youtu.be/HiX0MGSemLE
ವರದಿ: ಶಶಿಧರ್ ಹೊಸಮನಿ, ಕೊಪ್ಪಳ ಜಿಲ್ಲೆ, ಯಲಬುರ್ಗಾ






