
ಶಿವಮೊಗ್ಗ: ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ತಂತ್ರಜ್ಞಾನವನ್ನು ಬಳಸಿಕೊಂಡು ಮಹತ್ವದ ಕ್ರಮ ಕೈಗೊಂಡಿದೆ. ಬಂದ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರಾವತಿ ಗ್ರಾಮಾಂತರ ಪೊಲೀಸರು, ಒಟ್ಟು 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಅವರ ಖಡಕ್ ಸೂಚನೆ ಮೇರೆಗೆ ಈ ಕಾರ್ಯಾಚರಣೆ ನಡೆದಿದ್ದು, ಕೂಡ್ಲಿಗೆರೆ ಅರಣ್ಯ ಪ್ರದೇಶದಲ್ಲಿ ಡ್ರೋಣ್ ಹಾರಿಸಿ ಅಕ್ರಮ ಚಟುವಟಿಕೆಗಳನ್ನು ಪತ್ತೆ ಹಚ್ಚಲಾಗಿದೆ. ಹಲವು ದಿನಗಳಿಂದ ಈ ಭಾಗಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಅದರಂತೆ ಸೂಕ್ಷ್ಮವಾಗಿ ನಿಗಾವಹಿಸಿ, ತಂತ್ರಜ್ಞಾನ ಬಳಸಿ ಸಾಕ್ಷ್ಯ ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗಿದೆ.ವಿಶೇಷವಾಗಿ ಮಲ್ಲಾಪುರ, ಕಲ್ಲಿಹಾಳ್ ಮತ್ತು ತಟ್ಟೆಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲು-ರಾತ್ರಿ ತೂರಬಿಲ್ಲೆ ಆಟ ಸೇರಿದಂತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಕೇಳಿಬಂದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಡ್ರೋಣ್ ಮೂಲಕ ಮೇಲ್ವಿಚಾರಣೆ ನಡೆಸಿ, ಘಟನೆಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ.

ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ 19 ಮಂದಿಯನ್ನು ಗುರುತಿಸಿ ಅವರ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.ಈ ಕಾರ್ಯಾಚರಣೆಯಿಂದ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ತಾತ್ಕಾಲಿಕ ತಡೆ ಬಿದ್ದಿದ್ದು, ಸಾರ್ವಜನಿಕರು ಪೊಲೀಸ್ ಕ್ರಮವನ್ನು ಸ್ವಾಗತಿಸಿದ್ದಾರೆ.


